ನವದೆಹಲಿ : ಮುಂದಿನ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿರ್ಹಣಾ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ.
ವರ್ಚುವಲ್ ಮೂಲಕ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಹತ್ವದ ಶಿಫಾರಸು ಮಾಡಿದೆ. ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿದೆ. ಆದ್ರೆ ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಮಗೆ ನೀರಿನ ಕೊರತೆ ಇದೆ, ನಾನು ಸಿಎಂ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ನಮಗೆ ಮಳೆ ಇಲ್ಲ, ವರ್ಷ ಪೂರ್ತಿ ಕುಡಿಯುವ ನೀರು ಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ತಮಿಳುನಾಡಿಗೆ ಹರಿದು ಹೋಗಲಿದೆ. ರಾಜ್ಯದ ಜಲಾಶಯಗಳಲ್ಲಿ ಈಗಾಗಲೇ ಕುಡಿಯುವ ನೀರು ಮತ್ತು ಕೃಷಿಗೆ ನೀರಿನ ಅಭಾವವಿರುವಾಗ, ಈ ಪ್ರಮಾಣದ ನೀರನ್ನು ಹೊರಗೆ ಬಿಡುವುದು ಕೆಆರ್‌ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಸಂಗ್ರಹದ ಮೇಲೆ ತೀವ್ರ ಪರಿಣಾಮ ಬೀರಲಿದೆ.
ಮುಂದಿನ ನಡೆ ಏನು?
ಸಿಡಬ್ಲ್ಯೂಆರ್‌ಸಿ ನೀಡಿರುವ ಈ ಶಿಫಾರಸನ್ನು ಪ್ರಶ್ನಿಸಿ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ’ಕ್ಕೆ (ಸಿಡಬ್ಲ್ಯೂಎಮ್‌ಎ) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾನೂನು ತಜ್ಞರು ಮತ್ತು ಜಲಸಂಪನ್ಮೂಲ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸರ್ಕಾರ ತುರ್ತು ಸಮಾಲೋಚನೆ ನಡೆಸಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸಿಡಬ್ಲ್ಯೂಆರ್‌ಸಿ ಶಿಫಾರಸ್ಸು ಅನ್ನು ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಬಹುದು. ಆದಾಗ್ಯೂ ನಿರ್ವಹಣಾ ಪ್ರಾಧಿಕಾರದ ನಿರ್ಧಾರ ಅಂತಿಮವಾಗಿರುತ್ತದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೂಡ ನೀರು ಹರಿಸಿ ಎಂದರೆ ಕರ್ನಾಟಕ ನೀರು ಬಿಡಲೇಬೇಕಿದೆ ಎಂದು ವರದಿಯಾಗಿದೆ.

