ಚಿಕ್ಕಬಳ್ಳಾಪುರ: ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬೆಂಬಲಿಗರು ಮೆಣಸಿಕಾಯಿ ತಿಂದು, ಟಿವಿ ಕ್ರಾಸ್ ರಸ್ತೆ ತಡೆದು ಪ್ರತಿಭಟಿಸಿದರು.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೂರು ತಾಲೂಕುಗಳಾದ ಬಾಗೇಪಲ್ಲಿ, ಚೇಳೂರು ಮತ್ತು ಗುಡಿಬಂಡೆ ತಾಲೂಕುಗಳನ್ನು ಬೆಂಬಲಿಗರು ಬಂದ್ ಮಾಡಿದ್ದಾರೆ. ಬಾಗೇಪಲ್ಲಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಟೈರ್ಗಳಿಗೆ ಬೆಂಕಿ ಹಚ್ಚಿ ಹೈಕಮಾಂಡ್ ಮತ್ತು ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಅಂಗವಾಗಿ ತಾಲೂಕಿನಲ್ಲಿ ಅಂಗಡಿಗಳು ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿತ್ತು. ಅಲ್ಲದೆ, ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಮುಖಂಡರು ಹಾಗೂ ಸಾರ್ವಜನಿಕರು ಮೆರವಣಿಗೆ ನಡೆಸಿದರು.
ತಾಲೂಕಿನ ವಿವಿಧ ಬೀದಿಗಳಲ್ಲಿ ನೂರಾರು ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಬಳಿಕ ಪ್ರತಿಭಟನಾಕಾರರು ರಸ್ತೆ ಬದಿಯಲ್ಲೇ ಕುಳಿತು ಸಾಮೂಹಿಕವಾಗಿ ಊಟ ಸವಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರತಿಭಟನೆಯ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದ್ದು, ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

