ಬೆಂಗಳೂರು : ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ದೇಶಪಾಂಡೆ ಅವರನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ, ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 12 ರಂದು ಸರ್ಕಾರದ ಸಚಿವಾಲಯದಿಂದ ಹೊರಡಿಸಿರುವ ಆದೇಶದಲ್ಲಿ, ಆರ್.ವಿ. ದೇಶಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಗೆ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.
ದೀರ್ಘಕಾಲದ ರಾಜಕೀಯ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಆರ್.ವಿ. ದೇಶಪಾಂಡೆ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರಾಗಿದ್ದಾರೆ. ಹಲವು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿರುವ ಅವರು ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ. ಇದೀಗ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಸಂಬಂಧಿಸಿದ ಮಹತ್ವದ ಆಯೋಗದ ನೇತೃತ್ವವನ್ನು ಅವರಿಗೆ ವಹಿಸಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಇದೇ ವೇಳೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ನೇಮಕ ಮಾಡಲಾಗಿದೆ. ಆಗಸ್ಟ್ 12ರಂದು ಹೊರಡಿಸಿರುವ ಪ್ರತ್ಯೇಕ ಆದೇಶದಂತೆ, ಪೊನ್ನಣ್ಣ ಅವರ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಜವಾಬ್ದಾರಿಯಲ್ಲಿ ಮುಂದುವರಿಯಲಿದ್ದಾರೆ.
ಮತ್ತೊಂದೆಡೆ, ಮೈಸೂರು ಜಿಲ್ಲೆಯ ನಾಗವಾಲ ಗ್ರಾಮದ ಸಿ. ನರೇಂದ್ರ ಬಿನ್ ಹೆಚ್.ಕೆ. ಚಂದ್ರಶೇಖರ್ ಅವರನ್ನು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರ ನೇಮಕಾತಿಯೂ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

