ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣ ಇದೀಗ ಕರ್ನಾಟಕ–ತಮಿಳುನಾಡು ನಡುವಿನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣದ ವಾಸ್ತವಾಂಶ ಹೊರಬರುವ ಮುನ್ನವೇ ತಮಿಳುನಾಡಿನ ಹಲವು ರಾಜಕೀಯ ಪಕ್ಷಗಳ ನಾಯಕರು ಮೃತರನ್ನು ‘ತಮಿಳರು’ ಎಂದು ಗುರುತಿಸಿ, ಘಟನೆಗೆ ಭಾಷಾ–ರಾಜ್ಯಗಳ ಆಯಾಮ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
ಇಂದು ಪ್ರಕರಣ ತಮಿಳುನಾಡು ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸಿಬಿಐ ತನಿಖೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಗಮನ ಸೆಳೆಯುವ ನಿರ್ಣಯ ಮಂಡಿಸಿದ್ದಾರೆ. ಪ್ರತಿಪಕ್ಷಗಳ ಹಲವು ಸದಸ್ಯರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳ ಆರೋಪಗಳನ್ನು ಉಲ್ಲೇಖಿಸಿದ ಪಳನಿಸ್ವಾಮಿ, ಕರ್ನಾಟಕ ಅರಣ್ಯ ಇಲಾಖೆಯ ಸಿಬ್ಬಂದಿಯೇ ಮೂವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಹೇಳಿದ್ದಾರೆ.
ಆಗಸ್ಟ್ 15ರಂದು ಕಾವೇರಿ ವನ್ಯಧಾಮದ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಬೇಟೆ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಕರ್ನಾಟಕ ಅರಣ್ಯ ಇಲಾಖೆ ಹೇಳಿದೆ. ಘಟನೆಯಲ್ಲಿ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆಯ ಪ್ರಕಾರ, ಬೇಟೆಗಾಗಿ ಅರಣ್ಯ ಪ್ರವೇಶಿಸಿದ್ದ ತಂಡದ ವಿರುದ್ಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಮೃತರ ಕುಟುಂಬಸ್ಥರು ಮತ್ತು ತಮಿಳುನಾಡಿನ ಕೆಲವು ರಾಜಕೀಯ ನಾಯಕರು ಈ ವಿವರಣೆಯನ್ನು ಪ್ರಶ್ನಿಸುತ್ತಿದ್ದಾರೆ..
ಈ ಬೆಳವಣಿಗೆಯ ಬೆನ್ನಲ್ಲೇ ತಮಿಳುನಾಡಿನಲ್ಲಿ ಪ್ರಕರಣಕ್ಕೆ ‘ಮೂರು ತಮಿಳರ ಹತ್ಯೆ’ ಎಂಬ ರಾಜಕೀಯ ಬಣ್ಣ ನೀಡಲಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕರ್ನಾಟಕ ಅರಣ್ಯ ಇಲಾಖೆಯ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಕೂಡ ಘಟನೆ ಖಂಡಿಸಿದ್ದು, ಮಾನವ ಜೀವಕ್ಕೆ ಬೆಲೆ ನೀಡದೆ ನಡೆದ ಕ್ರೂರ ಕೃತ್ಯ ಎಂದು ಟೀಕಿಸಿದ್ದಾರೆ. ಪಿಎಂಕೆ ನಾಯಕ ಅಂಬುಮಣಿ ರಾಮದಾಸ್ ಸೇರಿದಂತೆ ಹಲವು ನಾಯಕರು ಕೂಡ ತನಿಖೆಗೆ ಆಗ್ರಹಿಸಿದ್ದಾರೆ.
ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮೃತರು ಜಾನುವಾರುಗಳನ್ನು ಹುಡುಕಿಕೊಂಡು ಅರಣ್ಯಕ್ಕೆ ತೆರಳಿದ್ದವರು ಎಂಬ ವಾದವನ್ನೂ ಮುಂದಿಟ್ಟಿದ್ದಾರೆ. ಇದೇ ವೇಳೆ ಪಿಎಂಕೆ ಪ್ರಕರಣವನ್ನು ‘ನಕಲಿ ಎನ್ಕೌಂಟರ್’ ಎಂದು ಆರೋಪಿಸಿ ಸಿಬಿಐ ತನಿಖೆಗೆ ಆಗ್ರಹಿಸಿದೆ ಹಾಗೂ ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ.
ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ರಾಜಕೀಯ ಹೇಳಿಕೆಗಳಲ್ಲಿ ‘ತಮಿಳರು’
ಈ ನಡುವೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡಿನ ರಾಜಕಾರಣಿಗಳು ಕರ್ನಾಟಕದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ತನ್ನ ಪ್ರದೇಶವನ್ನು ಮತ್ತು ಆಡಳಿತಾತ್ಮಕ ವಿಚಾರಗಳನ್ನು ನೋಡಿಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಅವರು ಹೇಳಿದ್ದಾರೆ. ಪ್ರಕರಣದ ಕುರಿತು ಕರ್ನಾಟಕ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲು ಮುಂದಾಗಿದೆ.

