ಬೆಂಗಳೂರು, ಸೆ.09: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನಕ್ಕೆ ಒಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ ಕನ್ನಾಳೆ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಳೆದ 10 ದಿನಗಳಿಂದ ಸಿಐಡಿ ಬಂಧನದಲ್ಲಿದ್ದ ಜ್ಞಾನೇಂದ್ರ ಕುಮಾರ್ ಮತ್ತುಬಸವರಾಜ ಕನ್ನಾಳೆ ಅವರನ್ನು ಬುಧವಾರ 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ಅಗತ್ಯವಿಲ್ಲ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಬಳಿಕ ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತು.
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮದ ಕುರಿತು ಸಿಐಡಿ ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆ ಇದೆ.
ತಪ್ಪು ಒಪ್ಪಿಕೊಂಡ ಜ್ಞಾನೇಂದ್ರ?:
ಕೆಪಿಎಸ್‌ಸಿ ಮಾಜಿ ಪರೀಕ್ಷಾ ನಿಯಂತ್ರಕ ಹಾಗೂ ಅಮಾನತುಗೊಂಡಿರುವ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಸಿಐಡಿ ವಿಚಾರಣೆಯ ವೇಳೆ ಜ್ಞಾನೇಂದ್ರ ಕುಮಾರ್ತಾವೇ ಖುದ್ದಾಗಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

