ಬೆಂಗಳೂರು : ಎಸ್ಸಿಎಸ್ಪಿ-ಟಿಎಸ್ಪಿ ಅಡಿ 2025-26 ನೇ ಸಾಲಿಗೆ 34 ಇಲಾಖೆಗಳ 451 ಯೋಜನೆಗಳಿಗೆ ಒಟ್ಟು 42,503 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಎಸ್.ಸಿ.ಎಸ್.ಪಿ ಅಡಿ 30,649 ಕೋಟಿ ರೂ. ಮತ್ತು ಟಿ.ಎಸ್.ಪಿ ಅಡಿ 11,854 ಕೋಟಿ ರೂ. ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ವಿವರಣೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಗೆ 5430 ಕೋಟಿ ರೂ. ಹಂಚಿಕೆಯಾಗಿದ್ದು, ಪರಿಶಿಷ್ಟ ಪಂಗಡಕ್ಕೆ 2242.95 ಕೋಟಿ ರೂ. ಹಂಚಿಕೆಯಾಗಿರುತ್ತದೆ. ಇದು ಸಮಾಜ ಕಲ್ಯಾಣ ಇಲಾಖೆಗೆ ಪರಿಶಿಷ್ಟ ಪಂಗಡ ಇಲಾಖೆಗೆ ಒಟ್ಟು ಹಂಚಿಕೆಯ 17 ಮಾತ್ರ ಆಗುತ್ತದೆ. ಈ ಹಂಚಿಕೆಯನ್ನು ಹೆಚ್ಚಿಸಲು ಆರ್ಥಿಕ ಇಲಾಖೆಗೆ ತಿಳಿಸಲಾಗಿದೆ ಎಂದು ಹೇಳಿದರು.
ಕೆಲವು ಇಲಾಖೆಗಳಲ್ಲಿ ಅನುದಾನ ಬಿಡುಗಡೆ ಆಗಿದ್ದರೂ 104.56 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವುದಿಲ್ಲ. ಬಿಡುಗಡೆ ಮಾಡಿದ ಅನುದಾನವನ್ನು ಅಧಿಕಾರಿಗಳು ಶೇ.100 ವೆಚ್ಚ ಮಾಡಬೇಕಾಗಿತ್ತು. ಕಾಯ್ದೆಯಂತೆ ಈ ಅನುದಾನ 2027-28 ನೇ ಸಾಲಿಗೆ ಮರು ಹಂಚಿಕೆ ಮಾಡಲಾಗುತ್ತದೆ. ವಿವಿಧ ಇಲಾಖೆಗಳಲ್ಲಿ ಮುಖ್ಯವಾಗಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ 2,841 ಕೋಟಿ ರೂ.ಗಳು ಬಿಡುಗಡೆಯಾಗಿರುವುದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಬಿಡುಗಡೆಯಾದ ಹಣ ವೆಚ್ಚ ಮಾಡಿ ಹಣಬಳಕೆ ಪ್ರಮಾಣ ಪತ್ರವನ್ನು ಭಾರತ ಸರ್ಕಾರಕ್ಕೆ ಅನುದಾನವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಳ್ಳಲು ಎಲ್ಲಾ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಂಧನ, ಕಂದಾಯ, ಸಾರಿಗೆ, ಆರ್ಡಿಪಿಆರ್, ಆಹಾರ, ಆರೋಗ್ಯ, ಶಾಲಾ ಶಿಕ್ಷಣ, ವಸತಿ, ಯೋಜನೆ ಒಟ್ಟು 10 ಇಲಾಖೆಗಳಿಗೆ 32,328 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇದು ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಒಟ್ಟು ಹಂಚಿಕೆಯ ಶೇ.75 ಹಂಚಿಕೆಯಾಗಿರುತ್ತದೆ. ಕೆಲವು ಇಲಾಖೆಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಅನುದಾನ ನೀಡಿರುವುದು ಕಂಡುಬಂದಿದೆ, ವಿವಿಧ ಇಲಾಖೆಗಳಿಗೆ ಒದಗಿಸಿದ ಅನುದಾನ ಉಳಿಕೆ ಆಗುವುದನ್ನು ಪರಿಶೀಲಿಸಿ ಬೇಡಿಕೆ ಇರುವ ಇಲಾಖೆಯ ಯೋಜನೆಗಳಿಗೆ ಹಂಚಿಕೆ ಮಾಡಲು ಆರ್ಥಿಕ ಇಲಾಖೆಗೆ ತಿಳಿಸಲಾಗಿದೆ ಎಂದರು.
ಪ್ರಜಾಪ್ರಭುತ್ವ ದಿನಾಚರಣೆ
ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆ ಪರಿಚಯವನ್ನು ಮಾಡಿಕೊಡುವ ಉದ್ದೇಶದಿಂದ ಪ್ರಸಕ್ತ ವರ್ಷ ಪ್ರಜಾಪ್ರಭುತ್ವ ದಿನಾಚರಣೆಯೊಂದಿಗೆ ಯುವ ಸಂಸತ್ತು ಕಾರ್ಯಕ್ರಮವನ್ನು ರಾಜ್ಯದ್ಯಂತ ಈ ಕೆಳಕಂಡ ದಿನಾಂಕದಂದು ಆಯೋಜಿಸಲು ಉದ್ದೇಶಿಸಲಾಗಿದೆ.
ಸೆ.15 ರಂದು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಂದ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಗುತ್ತದೆ. ಅದೇ ದಿನ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಸಭೆಗಳನ್ನೂ ನಡೆಸಲಾಗುತ್ತದೆ. ತಾಲ್ಲೂಕು ಮಟ್ಟದಲ್ಲಿ ಸೆ.16 ರಿಂದ 10 ರವರೆಗೆ ಯುವ ಸಂಸತ್ತು ಸಭೆಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಸಭೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಲಾಗುತ್ತದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ.11 ರಿಂದ 30ರ ವರೆಗೆ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಜಿಲ್ಲಾ ಮಟ್ಟದ ಸಭೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಲಾಗುತ್ತದೆ.
ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ವಿದ್ಯಾರ್ಥಿಯಂತೆ ಒಟ್ಟು 224 ವಿದ್ಯಾರ್ಥಿಗಳನ್ನೊಳಗೊಂಡ ರಾಜ್ಯ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ನ.26ರ ಸಂವಿಧಾನ ದಿನಾಚರಣೆಯ ದಿನದಂದು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

