ಮಂಡ್ಯ, ಸೆ.15: ನಾಳೆ -ಸೆ.16 ರಂದಯ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ 108 ಗಣೇಶ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ಈ ಬೃಹತ್ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿವೆ.
ಮದ್ದೂರು ಪಟ್ಟಣ ಹಾಗೂ ಸುತ್ತಮುತ್ತಲ ವಿವಿಧ ಬಡಾವಣೆ, ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಬರೋಬ್ಬರಿ 108 ಗಣೇಶ ಮೂರ್ತಿಗಳನ್ನು ಒಂದೆಡೆ ಸೇರಿಸಿ ಸಾಮೂಹಿಕವಾಗಿ ವಿಸರ್ಜಿಸಲಾಗುತ್ತದೆ.
ಕಳೆದ ವರ್ಷ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು, ಈ ಬಾರಿ ಅತ್ಯಂತ ಅದ್ದೂರಿಯಾಗಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮಾಡಲು ಬೃಹತ್ ಯೋಜನೆ ರೂಪಿಸಿದ್ದಾರೆ.
ಸಾಮೂಹಿಕ ವಿಸರ್ಜನಾ ಕಾರ್ಯಕ್ರಮ ಹಾಗೂ ಬೃಹತ್ ಮೆರವಣಿಗೆಯಲ್ಲಿ ಸುಮಾರು 10,000ಕ್ಕೂ ಹೆಚ್ಚು ಭಕ್ತರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಮದ್ದೂರು ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.
ರಾಜ್ಯದ ಪ್ರಮುಖ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎರಡೂ ಪಕ್ಷಗಳ ಹಲವು ಶಾಸಕರು, ಮಾಜಿ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

