ಬೆಂಗಳೂರು: ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ಕಿಡಿಗೇಡಿಗಳ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿರುವ ಘಟನೆ ನಗರದ ಉತ್ತರಹಳ್ಳಿ–ಅರೆಹಳ್ಳಿ ಭಾಗದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಫಿಶ್ ಹೋಟೆಲ್ ಬಳಿ ನಿಂತಿದ್ದವರ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ತರಕಾರಿ ವ್ಯಾಪಾರಿಗಳ ಮೇಲೂ ಲಾಂಗು ಬೀಸಿ ದಾಳಿ ಮಾಡಿದ್ದಾರೆ.
ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಕಿರಣ್, ರಾಜು ಸೇರಿದಂತೆ ಹಲವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಕಿಡಿಗೇಡಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಯಾವುದೇ ಕಾರಣವಿಲ್ಲದೆ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಲಾಗಿದೆ ಎಂದು ಗಾಯಾಳುಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಗಾಯಾಳುಗಳಿಂದ ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದಾರೆ. ದಾಳಿಕೋರರ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

