ಮಂಗಳೂರು ಸೆ.30: ಜೋಕಟ್ಟೆ ಬಳಿಯ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ.
ಮಧ್ಯಾಹ್ನ 12.15ರ ಸುಮಾರಿಗೆ MRPLನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬೆನ್ನಲ್ಲೇ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, MRPL ಸಿಬ್ಬಂದಿ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.
ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಧಿಕಾರಿಗಳು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಸ್ಫೋಟದ ಕುರಿತು ಮಾಹಿತಿ ಪಡೆದುಕೊಂಡರು.
ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಸದ್ದು ಕೇಳಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟಕದಿಂದ ದಟ್ಟ ಹೊಗೆ ಆವರಿಸಿಕೊಂಡಿತ್ತು.
ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಘಟಕದಲ್ಲಿನ ಹಾನಿ ಹಾಗೂ ಗಾಯಾಳುಗಳ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

