ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದೆ. ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದರ ನಡುವೆ ರಾಜ್ಯದ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ಕೆಲವು ಗಂಟೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ಇದೆ.
ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್?
ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಬಿರುಗಾಳಿಗೆ ಮರದ ಕೊಂಬೆಗಳು ಮುರಿದು ಬೀಳುವ ಹಾಗೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಎಲ್ಲೆಲ್ಲಿ ನೀರು?
ಮಳೆಯ ಹೊಡೆತಕ್ಕೆ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್ ಹಾಗೂ ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಸಂಚಾರದ ವೇಗ ಕುಂಠಿತಗೊಂಡಿದೆ.
ಬಳಗೆರೆ ರಸ್ತೆ ಸಂಪರ್ಕಿಸುವ ಜಂಕ್ಷನ್‌ನಲ್ಲಿ ಮಳೆ ನೀರು ನಿಂತು ರಸ್ತೆಯೇ ಮಿನಿ ಕೆರೆಯಂತಾಗಿದೆ. ವೈಟ್‌ಫೀಲ್ಡ್‌ನ ವಿಬ್‌ಗಯಾರ್ ರಸ್ತೆಯಲ್ಲೂ ನೀರು ನಿಂತಿದ್ದು, ಕೆಲ ವಾಹನಗಳು ನೀರಿನಲ್ಲೇ ಸಿಲುಕಿಕೊಂಡಿವೆ.
ಸಹಕಾರ ನಗರದಲ್ಲೂ ಮಳೆ ನೀರು ರಸ್ತೆಗೆ ನುಗ್ಗಿದ್ದು, ಮೋರಿ ಬ್ಲಾಕ್ ಆಗಿರುವ ಕಾರಣ ವಾಹನ ಸವಾರರು ಹಾಗೂ ಸ್ಥಳೀಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಚಿತ್ರಮಂದಿರದಲ್ಲೂ ಮಳೆ ಅವಘಡ
ಪೀಣ್ಯ-ದಾಸರಹಳ್ಳಿ ಬಳಿಯ ಭಾರತಿ ಚಿತ್ರಮಂದಿರದಲ್ಲಿ ಮಳೆಯಿಂದ ಅವಘಡ ಸಂಭವಿಸಿದೆ. ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಪ್ರೇಕ್ಷಕನ ಮೇಲೆ ಬಿದ್ದಿದೆ. ಘಟನೆಯಲ್ಲಿ ಪ್ರೇಕ್ಷಕನ ತಲೆಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಚಿತ್ರಮಂದಿರದ ಸಿಬ್ಬಂದಿ ಸಿನಿಮಾ ಪ್ರದರ್ಶನವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ.
ವಾಹನ ಸವಾರರಿಗೆ ಪೊಲೀಸರ ಸೂಚನೆ
ಮುಂದಿನ ದಿನಗಳಲ್ಲೂ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ರಸ್ತೆಯಲ್ಲಿ ನೀರು ನಿಂತಿರುವ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಿ. ಭಾರೀ ಮಳೆಯ ಸಂದರ್ಭದಲ್ಲಿ ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸಿ ಎಂದು ಪೊಲೀಸರು ಸೂಚಿಸಿದ್ದಾರೆ.
ನಗರದ ತಕ್ಷಣದ ಸಂಚಾರ ಪರಿಸ್ಥಿತಿ ಹಾಗೂ ರಸ್ತೆ ಅಪ್‌ಡೇಟ್‌ಗಳಿಗಾಗಿ ಬಿಟಿಪಿ ಅಸ್ತ್ರಂ ಆ್ಯಪ್ ಮತ್ತು ಸಂಚಾರ ಪೊಲೀಸರ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

