ನವದೆಹಲಿ ಅ.8: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ.
ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲು ಜಲಮಾಪನ ಕೇಂದ್ರದಲ್ಲಿ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಸೂಚಿಸಿದೆ. ಜಲಾಶಯಗಳ ನೀರಿನ ಮಟ್ಟ, ಒಳಹರಿವು, ಮಳೆ ಪ್ರಮಾಣ ಹಾಗೂ ಎರಡೂ ರಾಜ್ಯಗಳ ನೀರಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಕರ್ನಾಟಕದ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪರವಾಗಿ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. KRS, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಲ್ಲಿ ಒಟ್ಟಾರೆ ಸುಮಾರು 49 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕುಡಿಯುವ ನೀರಿನ ಅಗತ್ಯಕ್ಕಾಗಿ ನೀರನ್ನು ಸಂರಕ್ಷಿಸಬೇಕಾದ ಪರಿಸ್ಥಿತಿ ಇದೆ ಎಂದು ರಾಜ್ಯ ಸರ್ಕಾರ CWMAಗೆ ತಿಳಿಸಿತ್ತು.
ತಮಿಳುನಾಡಿಗೆ ಈ ಹಿಂದೆ ಪ್ರತಿದಿನ 4 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಸೂಚಿಸಿತ್ತು. ಇದನ್ನು 2 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಮನವಿ ಮಾಡಿತ್ತು. ಆದರೆ ಇದೀಗ CWMA, CWRC ಶಿಫಾರಸನ್ನು ಎತ್ತಿಹಿಡಿದು 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.
ಇದೇ ವೇಳೆ ಕಾವೇರಿ ನೀರು ಹಂಚಿಕೆ ವಿಚಾರ ಸುಪ್ರೀಂಕೋರ್ಟ್‌ನಲ್ಲಿಯೂ ವಿಚಾರಣೆಯಲ್ಲಿದೆ. ಮುಂದಿನ ವಿಚಾರಣೆ ಅಕ್ಟೋಬರ್ 12ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ವಾದವನ್ನು ಸುಪ್ರೀಂಕೋರ್ಟ್‌ನಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ.
ರಾಜ್ಯದ ಜಲಾಶಯಗಳ ಪರಿಸ್ಥಿತಿಯನ್ನು ಗಮನಿಸಿದರೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂಬುದು ಕರ್ನಾಟಕದ ನಿಲುವಾಗಿದೆ. ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ಮುಂದೆ ವಿವರಿಸಿ ಕರ್ನಾಟಕದ ಪರ ವಾದ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

