ನವದೆಹಲಿ, ಅ.9: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದ ನಿರ್ಬಂಧಗಳನ್ನು ಪ್ರಶ್ನಿಸಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅರ್ಜಿಯ ಪರ ವಕಾಲತ್ತು ವಹಿಸಿಕೊಂಡಿದ್ದು, ಅಕ್ಟೋಬರ್ 9ರಂದೇ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಗೆ ಅಡ್ಡಿಪಡಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪದ ಹಿನ್ನಲೆ ಅರ್ಜಿ ಸಲ್ಲಿಕೆಯಾಗಿದೆ. ಕ್ರೊಕ್ರೋಚ್ ಜನತಾ ಪಾರ್ಟಿ (CJP), ಎಸ್‌ಎಫ್‌ಐ, ಎಐಎಸ್‌ಎಫ್, ಎಐಎಸ್‌ಎ ಸೇರಿದಂತೆ ಹಲವು ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ಇದನ್ನು ತಡೆಯಲು ವಿವಿಧ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ ಎಂದು ಪ್ರತಿಭಟನಾ ಸಂಘಟನೆಗಳು ದೂರಿವೆ.
ಪ್ರತಿಭಟನೆಗೆ ಅನುಮತಿ ನಿರಾಕರಣೆ, ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು, ಇತರ ರಾಜ್ಯಗಳಿಂದ ದೆಹಲಿಗೆ ಬರುವ ರೈಲುಗಳ ಸಂಚಾರ ರದ್ದು, ಇಂಟರ್ನೆಟ್ ಸೇವೆ ಸ್ಥಗಿತ, ವಿದ್ಯಾರ್ಥಿ-ಯುವಜನ ನಾಯಕರ ಬಂಧನ ಹಾಗೂ ತಡೆಗೋಡೆಗಳ ನಿರ್ಮಾಣದಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಆರೋಪಗಳು ವ್ಯಕ್ತವಾಗಿವೆ. ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ ಎಂದೂ ವರದಿಯಾಗಿದೆ.
ಈ ಹಿಂದೆ ಜುಲೈನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳನ್ನು ಅಕ್ಟೋಬರ್ 9ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ಈ ಅರ್ಜಿಗಳ ಪೈಕಿ ಒಂದು, ಅಕ್ಟೋಬರ್ 10ರಂದು ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿದೆ ಎಂದು ತಿಳಿದುಬಂದಿದೆ.
ರಾಷ್ಟ್ರಪತಿ ಭೇಟಿಗೆ ವಿರೋಧ ಪಕ್ಷಗಳ ನಿಯೋಗ
ಇದೇ ಸಂದರ್ಭದಲ್ಲಿ, ಎಸ್‌ಐಆರ್ ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ನಿಯೋಗದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವಂತೆ ಆಗ್ರಹ
ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಲು ವಿವಿಧ ರಾಜ್ಯಗಳಿಂದ ದೆಹಲಿಗೆ ಆಗಮಿಸುವವರ ಮೇಲೆ ನಿರ್ಬಂಧ ಹೇರಲಾಗುತ್ತಿದೆ ಎಂಬ ಆರೋಪಗಳ ನಡುವೆ, ಪ್ರತಿಭಟನೆಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಹೆಚ್ಚಾಗಿದೆ. ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮತ್ತು ನ್ಯಾಯಾಲಯದ ಮುಂದಿನ ನಿಲುವಿನತ್ತ ರಾಜಕೀಯ ವಲಯದ ಗಮನ ನೆಟ್ಟಿದೆ.

