ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ಚಾಮುಂಡಿ ಬೆಟ್ಟದಲ್ಲಿ ಧಾರ್ಮಿಕ ವಿಧಿವಿಧಾನಗಳು, ಮಂಗಳವಾದ್ಯಗಳ ನಿನಾದ ಹಾಗೂ ಜಾನಪದ ಕಲಾತಂಡಗಳ ಸಾಂಪ್ರದಾಯಿಕ ಮೆರವಣಿಗೆಯ ನಡುವೆ ವಿಶ್ವವಿಖ್ಯಾತ 416ನೇ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.
ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಉತ್ಸವವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.
ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗಿನ ಶುಭ ಧನುರ್ ಲಗ್ನದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವಿಯ ಉತ್ಸವ ಮೂರ್ತಿಗೆ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ ಸಲ್ಲಿಸಿದರು.
ಈ ಮೂಲಕ ನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ಧಾರ್ಮಿಕ ವೈಭವದ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಿತು.
ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಬಳಿಕ ಮುಖ್ಯಮಂತ್ರಿಗಳು ದಸರಾ ಆಚರಣೆಯ ಪ್ರಮುಖ ಸಂಪ್ರದಾಯಗಳಲ್ಲಿ ಒಂದಾದ ನಂದಿಧ್ವಜ ಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಾನಪದ ಕಲಾತಂಡಗಳ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಾಲಯದತ್ತ ತೆರಳಿದರು. ದೇವಾಲಯದ ಮುಂಭಾಗದಲ್ಲಿ ನಾಲ್ಕು ಈಡುಗಾಯಿಗಳನ್ನು ಒಡೆದು ನಾಡದೇವತೆಗೆ ಭಕ್ತಿ ಸಮರ್ಪಿಸಿದರು.
ಚಾಮುಂಡೇಶ್ವರಿಗೆ ವಿಶೇಷ ಪೂಜೆ
ದೇವಾಲಯ ಪ್ರವೇಶಿಸಿದ ಮುಖ್ಯಮಂತ್ರಿ ದಂಪತಿ, ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳೊಂದಿಗೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಧಾರ್ಮಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಗಣ್ಯರು ಮುಖ್ಯ ವೇದಿಕೆಗೆ ಆಗಮಿಸಿದರು. ಶುಭ ಮುಹೂರ್ತದಲ್ಲಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.
ಹಲವು ಸಚಿವರು, ಗಣ್ಯರು ಭಾಗಿ
ದಸರಾ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಿದ್ದರು. ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಿಜ್ವಾನ್ ಅರ್ಷದ್, ಈಶ್ವರ್ ಖಂಡ್ರೆ, ಡಾ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ ಹಾಗೂ ಮುಖ್ಯಮಂತ್ರಿ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಾಡಿನ ಸಂಸ್ಕೃತಿ, ಕಲೆ, ಪರಂಪರೆ ಮತ್ತು ಭಕ್ತಿಯ ಸಂಗಮವಾಗಿರುವ ಮೈಸೂರು ದಸರಾ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ನಡೆದ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ಆರಂಭ ಕಂಡಿತು.

