ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸಿ ಅಪಪ್ರಚಾರ ನಡೆಸಿದ ಆರೋಪದಡಿ ಯೂಟ್ಯೂಬ್ ಚಾನೆಲ್‌ಗೆ ಸಂಬಂಧಿಸಿದ ಇಬ್ಬರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
‘Karnataka Honeytrap’ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ವಿವಾದಾತ್ಮಕ ವಿಡಿಯೊ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸಿದ್ದರಾಮಯ್ಯ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಡಿಯೊ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ವಿಡಿಯೋ ಅಪ್‌ಲೋಡ್ ಮಾಡಿದವರು ಸಿಕ್ಕಿಬಿದ್ದರು; ವಿಡಿಯೊ ಕೊಟ್ಟವರು ಯಾರು?
ಪ್ರಾಥಮಿಕ ತನಿಖೆಯಲ್ಲಿ ವಶಕ್ಕೆ ಪಡೆದಿರುವ ಇಬ್ಬರೇ ವಿವಾದಾತ್ಮಕ ವಿಡಿಯೊವನ್ನು ‘Karnataka Honeytrap’ ಯೂಟ್ಯೂಬ್ ಚಾನೆಲ್‌ಗೆ ಅಪ್‌ಲೋಡ್ ಮಾಡಿರುವುದು ತಿಳಿದುಬಂದಿದೆ ಎಂದು ಮೂಲಗಳು ಹೇಳಿವೆ.
ಆದರೆ ವಿಡಿಯೊದ ಮೂಲದ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿಡಿಯೊವನ್ನು ಸಿದ್ಧಪಡಿಸಿದ್ದು ಯಾರು? ಅದನ್ನು ಯಾವಾಗ ಚಿತ್ರೀಕರಿಸಲಾಗಿದೆ? ಆರೋಪಿತರಿಗೆ ವಿಡಿಯೊ ತಲುಪಿಸಿದ್ದು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಸಿದ್ದರಾಮಯ್ಯ
ತಮ್ಮ ಹೆಸರನ್ನು ಉಲ್ಲೇಖಿಸಿ ಪ್ರಸಾರ ಮಾಡಲಾಗಿರುವ ವಿಡಿಯೊದಿಂದ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಿದ್ದರಾಮಯ್ಯ, ಇಂತಹ ವಿಡಿಯೊಗಳ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇದರ ಜೊತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ವಶಕ್ಕೆ ಪಡೆದವರ ಗುರುತು ಗೌಪ್ಯ!
ಪ್ರಕರಣ ಸಂಬಂಧ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದ್ದರೂ ಅವರ ಹೆಸರು, ಹಿನ್ನೆಲೆ ಹಾಗೂ ಇತರ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ವಿವಾದಾತ್ಮಕ ವಿಡಿಯೊದ ಮೂಲ ಮತ್ತು ಅದನ್ನು ಪ್ರಸಾರ ಮಾಡುವ ಹಿಂದಿನ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ ಎನ್ನಲಾಗಿದೆ.
ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆ
ವಿಡಿಯೊವನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸ್ ವಶದಲ್ಲಿರುವುದರಿಂದ ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದೆ. ವಿಡಿಯೊ ಸಿದ್ಧಪಡಿಸಿದವರು ಹಾಗೂ ಅದನ್ನು ಯೂಟ್ಯೂಬ್ ಚಾನೆಲ್‌ಗೆ ತಲುಪಿಸಿದವರ ಕುರಿತು ಮಾಹಿತಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ.

