ಬೆಂಗಳೂರು: ಅಕ್ರಮ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದು ಆರೋಪಿಸಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂಡಿಯಾ ಒಕ್ಕೂಟವು, ಮತ ಉಳಿಸಿ, ದೇಶ ಉಳಿಸಿ ಧೈಯ ವಾಕ್ಯದಡಿ ಪ್ರತಿಭಟನೆ ನಡೆಯುತ್ತಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಶಾಸಕ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಶಾಸಕರು, ಬಹುಭಾಷಾ ನಟ ಪ್ರಕಾಶ್ ರಾಜ್ ಭಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
SIR ವಿರೋಧಿ ಹೋರಾಟದ ವೇಳೆ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಕಾನೂನನ್ನು ರದ್ದುಗೊಳಿಸಬೇಕು. ಸುಪ್ರೀಂಕೋರ್ಟ್ ಸೂಚನೆಗಳಂತೆ ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸಂಪೂರ್ಣ ಸ್ವಾಯತ್ತತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ 240 ಸ್ಥಾನಗಳಷ್ಟೇ ಲಭಿಸಿದ ಹಿನ್ನೆಲೆಯಲ್ಲಿ, ಚುನಾವಣಾ ವ್ಯವಸ್ಥೆಯ ಮೂಲಕ ರಾಜಕೀಯ ಲಾಭ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುತಂತ್ರ ನಡೆಸುತ್ತಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದರು. ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಆಯ್ಕೆ ಸಮಿತಿಯಲ್ಲಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ಕೈಬಿಟ್ಟು, ಕೇಂದ್ರ ಸಚಿವರನ್ನು ಸೇರ್ಪಡೆಗೊಳಿಸಿರುವುದನ್ನು ಅವರು ಪ್ರಶ್ನಿಸಿದರು.
ಚುನಾವಣಾ ಆಯೋಗದ ಇಬ್ಬರು ಸದಸ್ಯರು ಕಳೆದ 10 ತಿಂಗಳಲ್ಲಿ 14 ಬಾರಿ ತಮ್ಮ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದ ಹರಿಪ್ರಸಾದ್, ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಟೀಕಿಸಿದರು.
ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ SIR ವಿರೋಧಿ ಹೋರಾಟವನ್ನು ತೀವ್ರಗೊಳಿಸಲಾಗುವುದು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಹಾಗೂ SIR ಪ್ರಕ್ರಿಯೆ ರದ್ದಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಇದೇ ವೇಳೆ, ಕರ್ನಾಟಕ ಸರ್ಕಾರವು SIR ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಬೇಕು. ರಾಜ್ಯದ ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು SIR ಪೂರ್ವದ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

