ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಗುರುವಾರ ಬೆಳಗ್ಗೆ ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ 15ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಹಳೆಯ ದೆಹಲಿಯ ಚಾವಡಿ ಬಜಾರ್ ಮೆಟ್ರೋ ನಿಲ್ದಾಣದ ಸಮೀಪವಿರುವ ಗಲಿ ಸಿತಾರಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 9.50ಕ್ಕೆ ಈ ಘಟನೆ ಸಂಭವಿಸಿದೆ.
ಮಾಹಿತಿ ತಿಳಿಯುತ್ತಿದ್ದಂತೆ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಅವಶೇಷಗಳಡಿಯಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ನಾಲ್ವರನ್ನು ಸ್ಥಳೀಯರೇ ರಕ್ಷಣಾ ತಂಡಗಳು ಬರುವ ಮೊದಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಕನಿಷ್ಠ 15 ಮಂದಿ ಸಿಲುಕಿರುವ ಸಾಧ್ಯತೆಯಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಹಲವು ತಂಡಗಳು
ಘಟನೆ ನಡೆದ ತಕ್ಷಣ ಆರು ಅಗ್ನಿಶಾಮಕ ವಾಹನಗಳು ಸೇರಿದಂತೆ ನೀರು ಸಾಗಿಸುವ ವಾಹನಗಳು ಹಾಗೂ ರಕ್ಷಣಾ ಉಪಕರಣಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ದೆಹಲಿ ಅಗ್ನಿಶಾಮಕ ದಳ, ದೆಹಲಿ ಪೊಲೀಸರು, ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಹಾಗೂ ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಲು ತುರ್ತು ಪ್ರಯತ್ನಗಳು ನಡೆಯುತ್ತಿವೆ.
ಎರಡು ತಿಂಗಳ ಹಿಂದೆಯೂ ಕಟ್ಟಡ ಕುಸಿದು ಏಳು ಮಂದಿ ಸಾವು
ದೆಹಲಿಯಲ್ಲಿ ಕಟ್ಟಡ ಕುಸಿತದ ಘಟನೆ ಮರುಕಳಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 6ರಂದು ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪೇಯಿಂಗ್ ಗೆಸ್ಟ್ ವಸತಿ ಗೃಹವಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.
ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಆ ಕಟ್ಟಡ ಕುಸಿದಿತ್ತು. ಘಟನೆಯ ಬಳಿಕ ದೆಹಲಿ ಸರ್ಕಾರವು ರಾಜಧಾನಿಯ ಕಟ್ಟಡಗಳ ರಚನಾತ್ಮಕ ಸುರಕ್ಷತಾ ಪರಿಶೀಲನೆ ನಡೆಸುವಂತೆ ಹಾಗೂ ಅನಧಿಕೃತ ಮತ್ತು ಅಪಾಯಕಾರಿ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.
ಸರ್ಕಾರದ ವಿರುದ್ಧ ಆಪ್ ನಾಯಕ ಸೌರಭ್ ಭಾರದ್ವಾಜ್ ಟೀಕೆ
ಇದೀಗ ಚಾವಡಿ ಬಜಾರ್ ಕಟ್ಟಡ ದುರಂತದ ಬೆನ್ನಲ್ಲೇ ದೆಹಲಿ ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ರೇಖಾ ಗುಪ್ತಾ ನೇತೃತ್ವದ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ.
ಕಟ್ಟಡಗಳ ಸುರಕ್ಷತಾ ಪರಿಶೀಲನೆ ಸಮರ್ಪಕವಾಗಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತಿರುವ ಅವರು, ನಗರಾಡಳಿತ ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ನಿಯಮಗಳ ಜಾರಿ ಕುರಿತು ಆರೋಪಗಳನ್ನು ಮಾಡಿದ್ದಾರೆ.

