ಜಮ್ಮು, ನ.12: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (SPO) ಗುಂಡೇಟಿನಿಂದ ಛಿದ್ರಗೊಂಡ ಮೃತದೇಹಗಳು ಗುರುವಾರ ಬೆಳಗ್ಗೆ ಪತ್ತೆಯಾಗಿವೆ. ಬುಧವಾರದಿಂದ ನಾಪತ್ತೆಯಾಗಿದ್ದ ಸಿಬ್ಬಂದಿಯನ್ನು ಬಾಬಿ ಚಂದ್ (57) ಮತ್ತು ರಶ್ಪಾಲ್ ಕುಮಾರ್ (45) ಎಂದು ಗುರುತಿಸಲಾಗಿದೆ.
ದಚನ್ ಪ್ರದೇಶದ ಕಿಯಾರ್ ಗ್ರಾಮದಲ್ಲಿ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಗುಂಪಿನ (SOG) ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಧರ್ನಾ-ಮರ್ವಾ ಪ್ರದೇಶದ ಸೇನಾ ಶಿಬಿರದತ್ತ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿದ್ದರು.
ಮೃತ ಪೊಲೀಸ್ ಸಿಬ್ಬಂದಿಯ ಸೇವಾ ಶಸ್ತ್ರಾಸ್ತ್ರಗಳು ಪತ್ತೆಯಾಗದಿರುವುದು ಉಗ್ರರ ಕೈವಾಡದ ಶಂಕೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ನಾಪತ್ತೆಯಾಗಿರುವ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಮತ್ತು ಭದ್ರತಾ ಪಡೆಗಳು ಅರಣ್ಯ ಪ್ರದೇಶ ಸೇರಿದಂತೆ ದುರ್ಗಮ ಬೆಟ್ಟಗುಡ್ಡಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಡ್ರೋನ್‌ಗಳ ಮೂಲಕ ಅರಣ್ಯ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದ್ದು, ಶ್ವಾನದಳವನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.
ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಉಗ್ರರ ಚಟುವಟಿಕೆಗಳನ್ನು ಹತ್ತಿಕ್ಕಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

