ಗುವಾಹಟಿ : ಅಸ್ಸಾಂನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪದ ರಂಗಾಜನ್ ಪ್ರದೇಶದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ (ಟ್ರಾವೆಲರ್) ಮತ್ತು ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಸ್ಸಾಂನ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಸ್ಥಳೀಯ ಶಾಸಕ ಅತುಲ್ ಬೋರಾ ಅವರು ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಗಾಯಾಳುಗಳನ್ನು ಜೋರ್ಹಾಟ್ ಮತ್ತು ಗೋಲಾಘಾಟ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
“ಈ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಕೆಲವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ” ಎಂದು ಸಚಿವ ಅತುಲ್ ಬೋರಾ ತಿಳಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು
ಕೋಹೋರಾ ವ್ಯಾಪ್ತಿಯ ಹಾಥಿಕುಲಿ ಟೀ ಎಸ್ಟೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 715ರಲ್ಲಿ ಈ ಅಪಘಾತ ಸಂಭವಿಸಿದೆ. ಗೋಲಾಘಾಟ್ನಿಂದ ನಾಗಾಂವ್ ಕಡೆಗೆ ತೆರಳುತ್ತಿದ್ದ ಟ್ರಾವೆಲರ್ ವಾಹನವು ಮೇಲ್ಭಾಗದ ಅಸ್ಸಾಂ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟ್ರಾವೆಲರ್ನಲ್ಲಿದ್ದವರಲ್ಲಿ ಬಹುತೇಕರು ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕೆಲವು ವೃದ್ಧರೂ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಲಾರಿ ಚಾಲಕ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು, “ನಾನು ತೇಜ್ಪುರದಿಂದ ದಿಬ್ರುಗಢದ ಕಡೆಗೆ ತೆರಳುತ್ತಿದ್ದೆ. ಟ್ರಾವೆಲರ್ ನೇರವಾಗಿ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆಯಿತು” ಎಂದು ತಿಳಿಸಿದ್ದಾರೆ. ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಾಹನದಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆಗೆ ಕಾರ್ಯಾಚರಣೆ
ಅಪಘಾತದ ತೀವ್ರತೆಗೆ ಟ್ರಾವೆಲರ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಅದರೊಳಗೆ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಿರಿಯ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು.
ಗಾಯಾಳುಗಳನ್ನು ಆರಂಭದಲ್ಲಿ ಕೋಹೋರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರವಾಗಿ ಗಾಯಗೊಂಡವರನ್ನು ಬೊಕಾಖಾಟ್, ಗೋಲಾಘಾಟ್ ಹಾಗೂ ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಯಿತು.
ಟ್ರಾವೆಲರ್ ವಾಹನದಲ್ಲಿ ನಿಖರವಾಗಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ವಾಹನದಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದಿರಬಹುದು ಎಂದು ವರದಿಗಳು ತಿಳಿಸಿವೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎಂಬ ಶಂಕೆ
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ವಾಹನಗಳ ವೇಗಕ್ಕೆ ನಿರ್ಬಂಧ ವಿಧಿಸಲಾಗಿದ್ದರೂ, ಟ್ರಾವೆಲರ್ ಅತಿವೇಗದಲ್ಲಿ ಸಂಚರಿಸುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ವೇಗದ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

