ನವದೆಹಲಿ, ನ. 17: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ದುರಂತವೊಂದು ಸಂಭವಿಸಿದ್ದು, ಎರಡು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದೆಹಲಿಯ ಶಹದಾರಾ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದ ಜ್ವಾಲಾ ನಗರದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಎರಡು ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ನೆಲಸಮವಾಗಿದೆ. ಕಟ್ಟಡ ಕುಸಿದ ರಭಸಕ್ಕೆ ಅದರ ಅವಶೇಷಗಳು ಸುತ್ತಮುತ್ತ ಹರಡಿಕೊಂಡಿದ್ದು, ಕಟ್ಟಡದ ಒಳಗೆ ಹಾಗೂ ಸುತ್ತಮುತ್ತ ಇದ್ದವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಬಳಿಕ ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಹೊರತರುವ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ದುರಂತದಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದು, ಅವರಲ್ಲಿ ಒಂದು ಮಗು ಕೂಡ ಸೇರಿದೆ. ಇನ್ನು ಹಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

