ಬೆಂಗಳೂರು, ನ.23 : ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸುವಂತೆ ಹಾಗೂ ಸರ್ಕಾರಿ ಶಾಲೆಗಳ ದತ್ತು ಮತ್ತು ಮೆಂಟರ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ನ. 26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಲಿದೆ.
ಸಂವಿಧಾನದ 21ಎ ವಿಧಿಯಡಿ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಮೂಲಭೂತ ಹಕ್ಕಾಗಿದೆ. ಆದರೆ ಶಿಕ್ಷಣ ಹಕ್ಕು ಕಾಯಿದೆ ಜಾರಿಯಾಗಿ ಹಲವು ವರ್ಷಗಳಾದರೂ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ ಎಂದು ವೇದಿಕೆ ಆರೋಪಿಸಿದೆ.
ಸರ್ಕಾರಿ ಶಾಲೆಗಳಿಗೆ ಅಗತ್ಯ ಶಿಕ್ಷಕರು, ಮೂಲಸೌಕರ್ಯ, ಕಲಿಕಾ ಸಾಮಗ್ರಿ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಅಥವಾ ಕಾರ್ಪೊರೇಟ್ ಕಂಪನಿಗಳ ಸುಪರ್ದಿಗೆ ನೀಡುವ ಬದಲು ಸರ್ಕಾರವೇ ಸಂಪೂರ್ಣ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದೆ.
ವೇದಿಕೆಯ ಪ್ರಮುಖ ಬೇಡಿಕೆಗಳು:
- ಮೂರು ತಿಂಗಳೊಳಗೆ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸಬೇಕು.
- ಸರ್ಕಾರಿ ಶಾಲೆಗಳ ಶಾಲಾ ದತ್ತು ಮತ್ತು ಮೆಂಟರ್ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕು.
ಈ ಬೇಡಿಕೆಗಳ ಕುರಿತು ಸರ್ಕಾರ ಧರಣಿ ಸ್ಥಳಕ್ಕೆ ಆಗಮಿಸಿ, ಕಾಲಮಿತಿಯೊಂದಿಗೆ ಲಿಖಿತ ಭರವಸೆ ನೀಡುವವರೆಗೆ ಸತ್ಯಾಗ್ರಹ ಮುಂದುವರಿಸುವುದಾಗಿ ವೇದಿಕೆ ತಿಳಿಸಿದೆ. ಪೋಷಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದೆ.

