ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸುತ್ತಿದೆ.
ಬಸ್ಗಳಲ್ಲಿ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.
ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ SSLC ವಾರ್ಷಿಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ತಾವು ಓದಿದ ಶಾಲೆ ಹೊರತಾಗಿ ಬೇರೆ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಿರುವುದರಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮನವಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್ಟಿಸಿ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದ ಎಲ್ಲಾ ಚಾಲಕರು, ನಿರ್ವಾಹಕರು ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಬರೆಯುವ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಿದೆ. ಇದಲ್ಲದೆ ಅವಶ್ಯಕತೆ ಇರುವೆಡೆ ವಿದ್ಯಾರ್ಥಿಗಳ ಕೋರಿಕೆ ಸ್ಥಳದಲ್ಲಿ ನಿಲುಗಡೆಗೆ ಸೂಚನೆ ನೀಡಲಾಗಿದೆ.