ಕೇಜ್ರಿವಾಲ್‌ ಬಂಧನ ಖಂಡಿಸಿ ಬೆಂಗಳೂರಿನಲ್ಲೂ ಪ್ರತಿಭಟನೆ

Most read

ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸಿತು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪಕ್ಷದ ನಿಕಟಪೂರ್ವ ಅಧ್ಯಕ್ಷ ಪ್ರಥ್ವಿ ರೆಡ್ಡಿ, ಮುಖಂಡರಾದ ಮೋಹನ್‌ ದಾಸರಿ, ಡಾ.ರಮೇಶ್‌ ಬೆಲ್ಲಂಕೊಂಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಅರವಿಂದ ಕೇಜ್ರಿವಾಲ್‌ ಬಂಧನ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಎಸಗಿದ ದಾಳಿ, ಬಿಜೆಪಿ ಸರ್ಕಾರ ಏಜೆನ್ಸಿಗಳನ್ನು ಬಳಸಿಕೊಂಡು ವಿರೋಧಪಕ್ಷಗಳ ದಮನ ಕಾರ್ಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಬಕಾರಿ ನೀತಿಯಿಂದಾಗಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಟ್ಟ ಅಕ್ರಮ ಹಣ ವರ್ಗಾವಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಕೇಜ್ರಿವಾಲ್‌ ಅವರನ್ನು ನಿನ್ನೆ ರಾತ್ರಿ ಬಂಧಿಸಿತ್ತು.

ಕ್ರಿಮಿನಲ್ ಪ್ರಕರಣವೊಂದರಲ್ಲಿ ಹಾಲಿ ಮುಖ್ಯಮಂತ್ರಿಯೇ ಬಂಧನಕ್ಕೊಳಗಾದ ಮೊದಲ ಪ್ರಕರಣ ಇದಾಗಿದ್ದು, ದಿಲ್ಲಿ ಹೈಕೋರ್ಟ್ ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ರಾತ್ರಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಕೇಜ್ರಿವಾಲ್ ಅವರನ್ನು ಬಂಧಿಸಿ ಕರೆದೊಯ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಜೈಲಿನಲ್ಲಿದ್ದಾರೆ.

More articles

Latest article