ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವಂತೆಯೇ ಕುತೂಹಲಕಾರಿ ವಿದ್ಯಮಾನಗಳು ಜರುಗುತ್ತಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್ ಪುತ್ರಿ, ಚಿತ್ರನಟಿ ನಿಶಾ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಬಹುತೇಕ ಏಪ್ರಿಲ್ ಮೊದಲ ವಾರದಲ್ಲೇ ನಿಶಾ ಕಾಂಗ್ರೆಸ್ ಸೇರ್ಪಡೆ ನಿಶ್ಚಿತ ಎಂದು ಕಾಂಗ್ರೆಸ್ ಮೂಲಗಳು #ಕನ್ನಡಪ್ಲಾನೆಟ್ ಗೆ ತಿಳಿಸಿವೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈಗ ಡಿ.ಕೆ.ಸುರೇಶ್ ಮತ್ತು ಸಿ.ಎನ್ ಮಂಜುನಾಥ್ ಸ್ಪರ್ಧೆಯ ನಡುವೆ ಯೋಗೀಶ್ವರ್ ನಡೆ ಕುತೂಹಲ ಮೂಡಿಸಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದ ಯೋಗೀಶ್ವರ್ ಈ ಬಾರಿ ಸುರೇಶ್ ಅವರನ್ನು ಸೋಲಿಸುತ್ತೇವೆ ಎಂದು ಬಹಿರಂಗವಾಗಿ ಗುಟುರು ಹಾಕುತ್ತಿದ್ದಾರೆ. ಆದರೆ ಮತ್ತೊಂದು ಬೆಳವಣಿಗೆಯಲ್ಲಿ ಅವರ ಪುತ್ರಿ ನಿಶಾ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ.
ಈಗಾಗಲೇ ನಿಶಾ ಯೋಗೇಶ್ವರ್, ಡಿ.ಕೆ.ಸೋದರರ ಸಂಪರ್ಕದಲ್ಲಿದ್ದು ಕಾಂಗ್ರೆಸ್ ಸೇರುವ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಏಪ್ರಿಲ್ ಮೊದಲ ವಾರದಲ್ಲೇ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಂಜುನಾಥ್ ಸ್ಪರ್ಧೆಯಿಂದ ಮಹತ್ವ ಪಡೆದುಕೊಂಡಿದೆ. ಸಂಸದ ಡಿಕೆ ಸುರೇಶ್ ವಿರುದ್ಧ ಕುಮಾರಸ್ವಾಮಿ, ಯೋಗೀಶ್ವರ್, ಮುನಿರತ್ನ ಒಂದಾಗಿ ಹೋರಾಟ ಮಾಡುತ್ತಿದ್ದಾರೆ.
ಚನ್ನಪಟ್ಟಣದಲ್ಲಿ ಮೊದಲು ಕುಮಾರಸ್ವಾಮಿ, ಯೋಗೀಶ್ವರ್ ಸಾಂಪ್ರದಾಯಿಕ ಎದುರಾಳಿಗಳಾಗಿದ್ದರೂ ಈ ಬಾರಿ ಒಂದಾಗಿ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ನಿಶಾ ಸೇರ್ಪಡೆಯಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಆಗಬಹುದಾದ ಲಾಭದ ಲೆಕ್ಕಾಚಾರ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ನಿಶಾ ಯೋಗೇಶ್ವರ್ ಮೂಲಕ ಕಾಂಗ್ರೆಸ್ ಕೆಲಸ ಮಾಡಿಸಿದರೆ ಅದರ ಸಣ್ಣ ಅನುಕೂಲ ಚುನಾವಣೆಯಲ್ಲಿ ಆಗಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ಪಾಳಯದಲ್ಲಿದೆ.