ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಅಭ್ಯರ್ಥಿಗಳು, ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸೌಮ್ಯ ರೆಡ್ಡಿ ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಮೆರವಣಿಗೆ ರೋಡ್ ಶೋ ಮಾಡಿದ್ದಾರೆ. ಈ ರೋಡ್ ಶೋದಲ್ಲಿ ಸೌಮ್ಯ ರೆಡ್ಡಿ, ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗಳು, ಎಂಎಲ್ಸಿ ಯುಬಿ ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ರೋಡ್ ಶೋ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿನ ಬೇಕು ಬೇಡಗಳಿಗಾಗಿ ರಾಜಕಾರಣ ಮಾಡ್ತೀವಿ. ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಕೂಡಲೇ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಐದೂ ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಈ ಮಗಳು ಸೌಮ್ಯ ಮತ್ತು ನನ್ನ ಮಗಳು ಐಶ್ವರ್ಯ ಬೇರೆ ಅಲ್ಲ. ನನ್ನ ಮಗಳೆಂದು ಭಾವಿಸಿ ಗೆಲ್ಲಿಸಿ ಕೊಡಿ ಎಂದು ಅವರು ಕೋರಿದರು.