ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದ ತಂಡ ಇಂದು ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿತು.
ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರು ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಇಂದು ಈ ಕುರಿತು ವಿಷಾದ ಕೋರುವ ಮೂಲಕ ಮೂಲಕ ತಪ್ಪು ಒಪ್ಪಿಕೊಂಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ತುಮಕೂರು ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತುರುವೇಕೆರೆಯಲ್ಲಿ ನಡೆದ ಸಭೆಯೊಂದರಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ನಾಲಿಗೆ ಹರಿಬಿಟ್ಟು ಮಾತನಾಡಿದ್ದರು. ಈ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶದ ಅಲೆಯೇ ಎದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ಮಹಿಳಾ ಆಯೋಗ ಈಗಾಗಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಿದೆ.