ರಾಜ್ಯಾದ್ಯಂತ “ಬಿ” ಖಾತಾ ಆಸ್ತಿಗಳಿಗೆ “ಎ” ಖಾತಾ ನೀಡಲು ನಿರ್ಧಾರ: ಸಚಿವ ಸಂಪುಟ ನಿರ್ಣಯ

Most read

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ “ಬಿ” ಖಾತಾಗೆ “ಎ” ಖಾತಾ ಮಾನ್ಯತೆ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್,  ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಈಗಾಗಲೇ ಬೆಂಗಳೂರಿನಲ್ಲಿ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮಗಳನ್ನು ರೂಪಿಸಿ ರಾಜ್ಯಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲು ತೀರ್ಮಾನಿಸಲಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ ಅಪಾರ್ಟ್‌ ಮೆಂಟ್/ ಫ್ಲಾಟ್ ಗಳಿಗೆ ಎ-ಖಾತಾ” ನೀಡಲಾಗುತ್ತದೆ. ಇದರಿಂದ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಆದರೆ ದಂಡದ ಪ್ರಮಾಣವನ್ನು ನಿಗದಿ ಮಾಡಿಲ್ಲ.‌ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ದರದ ಶೇ. 5 ರಷ್ಟು ದಂಡ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ‌ಆದರೆ ಶೇ. 5 ರಷ್ಟು ದಂಡಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.‌ ಇದೇ ಕಾರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳೂ ಬಂದಿಲ್ಲ. ಹಾಗಾಗಿ ಶೇ. 5 ದಂಡವನ್ನು ಕಡಿಮೆ ಮಾಡಲು ಚರ್ಚೆ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

More articles

Latest article