ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಭೆ ಕರೆದಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.
ಬೆಳಗಾವಿಯ ಹಿಂಡಲಗಾದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಲಕ್ಷ್ಮೀ ಹೆಬ್ಬಾಳ್ಕರ ಸಭೆ ನಡೆಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಚುನಾವಣಾಧಿಕಾರಿ ಮಹಾಂತೇಶ ಅವರು ಖಾಸಗಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಸಚಿವೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದ್ದಾರೆ. ಅಲ್ಲದೇ ಏಪ್ರಿಲ್ 30ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ. ಅಂದು ಕೋರ್ಟ್ ಕಲಾಪಕ್ಕೆ ಹಾಜರಾಗುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಮನ್ಸ್ ನೀಡಲಾಗಿದೆ.