ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಚಿತಪಡಿಸಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿದ್ದು, ಒಂದು ವೇಳೆ ಪಾಕಿಸ್ತಾನ ದಾಳಿ ನಡೆಸಿದರೆ ಭಾರತ ತಕ್ಕ ಪ್ರತ್ಯುತ್ತರ ನೀಡಲು ಸನ್ನದ್ದವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿರುವುದರಿಂದ ಸೇನೆಯ ಉನ್ನತ ಅಧಿಕಾರಿಗಳು ಇಂದಿನ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿಲ್ಲ. ತಾಂತ್ರಿಕ ವಿವರಗಳನ್ನು ಈ ಸಂದರ್ಭದಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.
ಸಂಸದೀಯ ವ್ಯವಹಾರ ಸಚಿವ ಕಿರಣ್ ರಿಜಿಜು ಮಾತನಾಡಿ, ಇಂದಿನ ಸಭೆ ಯಶಸ್ವಿಯಾಗಿದೆ. ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡಿ ಬಂದಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಶಸಸ್ತ್ರ ಪಡೆ ಮತ್ತು ಸರ್ಕಾರದ ಜತೆಯಲ್ಲಿ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿದೆ ಎಂದರು.
ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಲು ತನ್ನ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ವಿರೋಧ ಪಕ್ಷಗಳು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಭರವಸೆ ನೀಡಿವೆ. ಸಭೆಯ ನಂತರ ಪ್ರತಿಕ್ರಿಯೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ಕಾರ ಹೇಳಿದ್ದನ್ನು ನಾವು ಕೇಳಿದ್ದೇವೆ. ಕೆಲವು ಮಾಹಿತಿಯನ್ನು ಗೌಪ್ಯವಾಗಿಡಬೇಕು ಎಂದು ಸಚಿವರು ತಿಳಿಸಿದ್ದಾರೆ. ನಾವೆಲ್ಲರೂ ಸರ್ಕಾರದ ಜತೆಗಿರುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದರು.