ಚೆನ್ನೈ: ಖಾಸಗಿ ಶಾಲೆಗಳಿಗೆ ಸರ್ಕಾರಿ ಮಾನ್ಯತೆ ಹಾಗೂ ಅನುಮತಿ ಕೊಡಿಸುವ ಹೆಸರಿನಲ್ಲಿ ₹100 ಕೋಟಿಗೂ ಅಧಿಕ ಹಣ ಸಂಗ್ರಹಿಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು ಸೋಮವಾರ ಚೆನ್ನೈ ಪೊಲೀಸರ ಕೇಂದ್ರ ಅಪರಾಧ ವಿಭಾಗ ಬಂಧಿಸಿದೆ.
ಸುಮಾರು 177 ಖಾಸಗಿ ಶಾಲೆಗಳಿಂದ ‘ಪಕ್ಷದ ನಿಧಿ’ ಹೆಸರಿನಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಧನದಿಂದ ರಕ್ಷಣೆ ಕೋರಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳಲ್ಲಿ ಬಂಧನ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇತರ ಆರೋಪಿಗಳನ್ನೂ ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

