ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಿನಲ್ಲಿ ದೇಶದಲ್ಲೇ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ‘ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸೌಧದ ‌ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ’ ಎಂದ ಅವರು, ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಪಕ್ಷ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಸಾರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದರು.

ಉದ್ಘಾಟನೆ: ‘ರಾಜ್ಯದಲ್ಲಿ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ’ ಎಂದ ಮುಖ್ಯಮಂತ್ರಿ, ಸಾಂಕೇತಿಕವಾಗಿ ಒಂದು ಡಿಸಿಆರ್‌ಇ ಠಾಣೆಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 15 ಸಾಧಕರಿಗೆ ಮುಖ್ಯಮಂತ್ರಿ ‘ಅಂಬೇಡ್ಕರ್‌ ಪ್ರಶಸ್ತಿ’ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ, ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ, ಶಾಸಕ ರಿಜ್ವಾನ್‌ ಅರ್ಷದ್‌ ಮುಂತಾದವರು ಇದ್ದರು.

ಅದಕ್ಕೂ ಮೊದಲು ಅವರು ವಿಧಾನಸೌಧದ ಎದುರಿನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ದೇವರಾಜು ಅರಸು ರಸ್ತೆಯಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ ಸ್ಫೂರ್ತಿ ಸೌಧ’ದ ಶಂಕುಸ್ಥಾಪನೆ ನೆರವೇರಿಸಿ ಸೌಧದ ನೀಲನಕ್ಷೆಯನ್ನೂ ಮುಖ್ಯಮಂತ್ರಿ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಇದೇ 17ರಂದು ಸಚಿವ ಸಂಪುಟದ ವಿಶೇಷ ಸಭೆ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುತ್ತೇನೆ’ ಎಂದರು.

More articles

Latest article