ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಇಂದು ಕರೆ ಕೊಟ್ಟಿದ್ದ ಕೊಪ್ಪಳ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಂದ್‌ಗೆ 30ಕ್ಕೂ ಹೆಚ್ಚು ದಲಿತ, ಪ್ರಗತಿಪರ, ರೈತ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಬಹುತೇಕ, ಹೋಟೆಲ್ ಗಳನ್ನು ಮುಚ್ಚಲಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿರಲಿಲ್ಲ. ವಾಹನಗಳ ಸಂಚಾರವೂ ವಿರಳವಾಗಿತ್ತು. ಸರಕಾರಿ ಬಸ್ ಗಳು ಅಲ್ಲಲ್ಲಿ ಸಂಚರಿಸುತ್ತಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.
ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಕೊಪ್ಪಳದಲ್ಲಿ ಬಸ್ ಸಂಚಾರ ಇರುವುದಿಲ್ಲ. ಆಟೋ ಮತ್ತು ಖಾಸಗಿ ವಾಹನಗಳ ಸಂಚಾರವೂ ಕಡಿಮೆ ಇತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪ್ರತಿಭಟನಾಕಾರರು ಬೈಕ್, ಆಟೋ ರ್ಯಾಲಿ ನಡೆಸುವ ಮೂಲಕ ಬೃಹತ್ ಮೆರವಣಿಗೆ ನಡೆಸಿ ಸಂಸತ್ತಿನಲ್ಲಿ ಗೃಹಸಚಿವ ಅಮಿತ್ ಷಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರ ರಾಜೀನಾಮೆ ಪಡೆದು ಗಡಿಪಾರು ಮಾಡಬೇಕೆಂದು ಆಗ್ರಹಪಡಿಸಿದರು. ಬಂದ್ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, 500 ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಅಶೋಕ ವೃತ್ತ, ಕೇಂದ್ರಿಯ ಬಸ್ ನಿಲ್ದಾಣ, ಗಡಿಯಾರ ಕಂಬದ ವೃತ್ತ, ಜವಾಹರ ರಸ್ತೆ ಹೀಗೆ ಜನನಿಬಿಡ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಲ್ಲಿ ಪೊಲೀಸ್ ವಾಹನಗಳನ್ನು ನಿಲುಗಡೆ ಮಾಡಲಾಗಿದೆ.ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅಮಿತ್ ಶಾ ತಮ್ಮ ಭಾಷಣದ ವೇಳೆ, ಅಂಬೇಡ್ಕರ್, ಅಂಬೇಡ್ಕರ್ ಎಂದು ನಾಮಸ್ಮರಣೆ ಮಾಡುವುದು ಒಂದು ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದರೆ ಏಳು ಜನ್ಮಗಳಿಗೆ ಸ್ವರ್ಗ ಸಿಗುತ್ತಿತ್ತು ಎಂದು ಹೇಳುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.