ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ಪ್ರತ್ಯೇಕ ಕೋಮು ವಿರೋಧಿ ಟಾಸ್ಕ್ ಫೋರ್ಸ್ (ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್) ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ನಡೆದ ನಂತರ ಮೊದಲ ಬಾರಿಗೆ ಗೃಹ ಸಚಿವರು ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸರಣಿ ಸಭೆಗಳನ್ನು ನಡೆಸಿದರು. ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ನಂತರ ಮಾತನಾಡಿದ ಸಚಿವರು ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲು ನಿರ್ಧರಿಸಲಾಗಿದ್ದು, ಎರಡು ವಾರಗಳಲ್ಲಿ ಕಾರ್ಯಾರಂಭವಾಗಲಿದೆ ಎಂದು ತಿಳಿಸಿದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರೇ ನೀಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 8 ಮಂದಿಯ ಪೈಕಿ ಚಿಕ್ಕಮಗಳೂರಿನ ಇಬ್ಬರು ಹಿಂದೂ ಯುವಕರು ವಭಾಗಿಯಾಗಿರುವ ವದಂತಿಗಳಿದ್ದು, ಈ ಬಗ್ಗೆ ಪರಮೇಶ್ವರ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ.