ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ. ಇದರಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 41 ಸಾವಿರ ಆಶಾ ಕಾರ್ಯಕರ್ತೆಯರಿಗೆ ಅನುಕೂಲವಾಗಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ ಅಥವಾ ಪ್ರದೇಶ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಸ್ಥಿತಿ ಸುಧಾರಣೆಗೆ ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ಸಂಬಳ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರವಾಗಿ ಆಹೋರಾತ್ರಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಅತ್ತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೂ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪಟ್ಟು ಹಿಡಿದಿದ್ದರು.
ಇದರ ಜೊತೆಗೆ ಆರೋಗ್ಯ ಸಿಬ್ಬಂದಿಗಳ ಗೌರವ ಧನವೂ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ. ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನ 1500 ರೂಪಾಯಿಗೆ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.