ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹೌದು. ಈ ಕುರಿತು ಅವರೇ ಸ್ಪಷ್ಟಪಡಿಸಿದ್ದು, 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದು ವಿವರ ನೀಡಿದ್ದಾರೆ.
2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.
ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ವಿವರ ನೀಡಿದ್ದಾರೆ.