ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಎಚ್.ವೈ.ಮೇಟಿ (79) ಇಂದು ಅಸುನೀಗಿದ್ದಾರೆ. ಅವರು ಬಾಗಲಕೋಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಮೂರು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಹುಲ್ಲಪ್ಪ ಯಮುನಪ್ಪ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ನಾಳೆ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ, ಸಚಿವರು ಶಾಸಕರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

                                    