ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, 105 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಕೈಮೀರಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸ್ ಭಾರತಕ್ಕೆ ಮರಳಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮರುಸ್ಥಾಪನೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದಾದ್ಯಂತ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಘರ್ಷಣೆ ಉಂಟಾಗಿದ್ದು, ಈವರೆಗೆ 105 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನ ಗಾಯಗೊಂಡಿದ್ದಾದೆ ಎಂದು ತಿಳಿದು ಬಂದಿದೆ.
ಇದರ ನಡುವೆ, ಶುಕ್ರವಾರವಷ್ಟೇ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಶಾನ್ಯ ಗಡಿ ದಾಟಿ ಭಾರತ ತಲುಪಿದ್ದಾರೆ.
ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ ಕಳೆದ ಸೋಮವಾರ ಢಾಕಾ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ಸ್ವರೂಪ ಪಡೆದಿದೆ. ಮರುದಿನ ಆರು ಜನರು ಸಾವನ್ನಪ್ಪಿದರು, ನಂತರ ದೇಶಾದ್ಯಂತ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರವು ಆದೇಶ ನೀಡಿತು. ನಂತರ ತೀರ್ವ ಪ್ರತಿಭಟನೆ ನಡೆದಿದ್ದು ಈ ವೇಳೆ ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.
ಭಾರತಕ್ಕೆ ಹಿಂದಿರುಗಿದ ಅನೇಕ ವಿದ್ಯಾರ್ಥಿಗಳು ಎಂಬಿಬಿಎಸ್ ಪದವಿ ವಿದ್ಯಾರ್ಥಿಗಳಾಗಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಬಂದವರಾಗಿದ್ದಾರೆ.
ಬಾಂಗ್ಲಾದೇಶದಲ್ಲಿ ವಾಸಿಸುವ 15,000 ಭಾರತೀಯರ ಸುರಕ್ಷತೆಗಾಗಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.