ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಇಂದು ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿತು.
ಬಿಜೆಪಿ ಮುಖಂಡ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಈ ಅರ್ಜಿಯನ್ನು ವಜಾಗೊಳಿಸಿತ್ತು.
ಸೆ.22ರಂದು ನವರಾತ್ರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ನಡೆಸಬೇಕೆಂದು ಅರ್ಜಿದಾರರ ಪರ ವಕೀಲರು ಸಿಜೆಐ ಬಿ.ಆರ್.ಗವಾಯಿ ನೇತೃತ್ವದ ಪೀಠದ ಮುಂದೆ ಮನವಿ ಮಾಡಿದ್ದರು. ಬಾನು ಮುಷ್ತಾಕ್ ಅವರು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿರುವುದರಿಂದ ಅವರು ಉದ್ಘಾಟನೆ ನೆರವೇರಿಸಿದರೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.