Sunday, September 8, 2024

ಬಿಬಿಎಂಪಿ ವಲಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ: ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ: ತುಷಾರ್ ಗಿರಿ ನಾಥ್.

Most read

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.

ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ ಹಾಟ್ ಸ್ಪಾಟ್ ಸ್ಥಳಗಳಲ್ಲಿ ನಾಗರೀಕರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು. ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಹೆಚ್ಚಾಗಿ ಫಾಂಗಿಂಗ್ ಹಾಗೂ ಔಷಧಿ ಸಿಂಪಡಣೆ ಮಾಡಬೇಕೆಂದು ಸೂಚಿಸಿದರು.

ಆಯಾ ವಲಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಎಷ್ಟು ದರ ವಿಧಿಸುತ್ತಿದ್ದಾರೆ, ಎಷ್ಟು ಪ್ರಕರಣಗಳು ಕಂಡುಬರುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಹೆಚ್ಚು ದರ ವಿಧಿಸುವ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ರಸ್ತೆ ಗುಂಡಿಗಳನ್ನು ಕೂಡಲೆ ಮುಚ್ಚಲು ಕ್ರಮವಹಿಸಿ:

ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಬೇಕು. ಜೊತೆಗೆ ನಗರದಲ್ಲಿ ಪರಿಣಾಮಕಾರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಅಭಿವೃದ್ಧಿಪಡಿಸುತ್ತಿರುವ ತಂತ್ರಾಂಶವನ್ನು ಸಿದ್ದಪಡಿಸಲಾಗುತ್ತಿದ್ದು, ಅದನ್ನು ಅನಾವರಣಗೊಳಿಸಲು ಸಿದ್ದತೆ ಮಾಡಿಕೊಳ್ಳಲು ಸೂಚಿಸಲಾಯಿತು.

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮಾಡಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ ಆದಷ್ಟು ಬೇಗ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಿ:

ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ವಿಚಾರದಲ್ಲಿ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಪರಿಣಾಮಕಾರಿಯಾಗಿ ಕಾರ್ಯರ್ನಿಹಿಸಿ ಹೆಚ್ಚು ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಒಂದು ಬಾರಿ ತೀರುವಳಿ ಯೋಜನೆಯಡಿ ಬರುವ ಬಾಕಿ ಆಸ್ತಿ ಸುಸ್ತಿದಾರರಿಗೆ ಕೂಡಲೆ ತೆರಿಗೆ ಪಾವತಿಸಲು ಸೂಚಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಿಕೊಳ್ಳಬೇಕೆಂದು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಡಾ. ಆರ್.ಎಲ್ ದೀಪಕ್, ಸ್ನೇಹಲ್, ಕರೀಗೌಡ, ಪ್ರೀತಿ ಗೆಹ್ಲೋಟ್, ಶಿವಾನಂದ್ ಕಪಾಶಿ, ರಮೇಶ್, ರಮ್ಯಾ, ಪ್ರಧಾನ ಅಭಿಯಂತರರಾದ ಡಾ. ಪ್ರಹ್ಲಾದ್, ಎಲ್ಲಾ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article