ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ಮುಕ್ತಾಯವಾಗಿದ್ದು ನಾಳೆ ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಂಗ್ರೆಸ್ ಪಕ್ಷದ ಕಾರವಾರ ಶಾಸಕ ಸತೀಶ್ ಸೈಲ್ ಈ ಪ್ರಕರಣದ ಪ್ರಮುಖ ದೋಷಿಯಾಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ನಾಳೆ ತೀರ್ಪು ಪ್ರಕಟಿಸಲಿದೆ.
ಇಂದು ವಿಚಾರಣೆ ನಡೆದಾಗ ಸತೀಶ್ ಸೈಲ್ ಅವರು ತಮಗೆ ಅನಾರೋಗ್ಯ ಕಾಡುತ್ತಿದೆ. ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ನ್ಯಾಯಾಧೀಶರ ಎದುರು ಮನವಿ ಮಾಡಿಕೊಂಡಿದ್ದರು. ಮತ್ತೊಬ್ಬ ಆರೋಪಿ ಬಂದರಿನ ಅಧಿಕಾರಿ ಮಹೇಶ್ ಬಿಲಿಯಾ, ಈ ಪ್ರಕರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹೇಳಿದ್ದರು.
ನಿನ್ನೆ ಅಂತಿಮ ಆದೇಶ ಹೊರಡಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಸತೀಶ್ ಸೈಲ್ ಅವರನ್ನು ದೋಷಿ ಎಂದು ಗುರುತಿಸಿತ್ತು. ನಂತರ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ಧರು. ಗುರುವಾರ ರಾತ್ರಿಯೇ 8.30ರ ವೇಳೆಗೆ ಸೈಲ್ ಅವರನ್ನು ಆರೋಗ್ಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಪರಪ್ಪನ ಅಗ್ರಹಾರ ಬಂಧೀಖಾನೆಗೆ ಕರೆದೊಯ್ಯಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ಧರು.
ಪ್ರಕರಣದ ಹಿನ್ನೆಲೆ:
14 ವರ್ಷಗಳ ಹಿಂದೆ ಉತ್ತರ ಕರ್ನಾಟಕ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಪ್ರಕರಣ ಇದಾಗಿದೆ. ಸೈಲ್ ವಿರುದ್ಧ ಸುಮಾರು 200 ಕೋಟಿ ರೂ. ಮೌಲ್ಯದ 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪ ಕೇಳಿ ಬಂದಿತ್ತು.