ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಚಳಿ ಹೆಚ್ಚಾಗುತ್ತಿದ್ದರೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ, ಜನವರಿ 1ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಉತ್ತರ ಒಳನಾಡಿನ ಕರ್ನಾಟಕದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಹಲವು ಕಡೆ ಮಂಜು ಕವಿದ ವಾತಾವರಣ ಮುಂದುವರಿದಿದೆ. ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೀತದ ತೀವ್ರತೆ ಹೆಚ್ಚಾಗಿರುವುದು ಕಂಡು ಬಂದಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೀದರ್ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ 9 ರಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗಿದೆ.

