ಶಿಕಾರಿಪುರ: ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಯ ಹೆಸರಿನಲ್ಲಿ ಕಾಂಗ್ರೆಸ್ ‘ಭಾರತ್ ಜೋಡೋ 2.0’ ಪಾದಯಾತ್ರೆ ನಡೆಸಿತು. ಶಿಕಾರಿಪುರದಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಜನರಿಗೆ ಕರೆ ನೀಡಿದರು.
ಬಿಜೆಪಿ ಆಡಳಿತದಲ್ಲಿ ಜನವಿರೋಧಿ ನೀತಿಗಳು ಹಾಗೂ ಕೋಮು ದ್ವೇಷ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, ಸಮಾಜವನ್ನು ವಿಭಜಿಸುವ ಪ್ರಯತ್ನಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದರು.
ಯಾತ್ರೆಗೂ ಮುನ್ನ ಐತಿಹಾಸಿಕ ಈಸೂರು ಗ್ರಾಮಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರು, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕಿಟ್ಟದಹಳ್ಳಿಯಲ್ಲಿ ನಡೆದ ಪಾದಯಾತ್ರೆಯಲ್ಲೂ ಪಾಲ್ಗೊಂಡರು.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. SIR ಪ್ರಕ್ರಿಯೆಯಲ್ಲಿ ಕರ್ನಾಟಕದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ ಅವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಕಾಂಗ್ರೆಸ್ ಬೆಂಬಲಿಗ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು.
ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ವಿಭಜನೆ ಸೃಷ್ಟಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಇದೇ ಕಾರಣಕ್ಕೆ ರಾಹುಲ್ ಗಾಂಧಿ ‘ಭಾರತ್ ಜೋಡೋ’ ಯಾತ್ರೆ ನಡೆಸಿದ್ದರು. ಇದೀಗ ಪ್ರಜಾಪ್ರಭುತ್ವದ ರಕ್ಷಣೆಗೆ ‘ಜನತಾ ಜೋಡೋ ಜಾಗೃತಿ’ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣವಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಆಡಳಿತದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಶೋಷಿತ ಸಮುದಾಯಗಳ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, AICC ರಾಷ್ಟ್ರೀಯ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೆ.ಎಸ್. ಬಸವಂತಪ್ಪ, ಜವಳಿ ಮತ್ತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ವರ್, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಬಲ್ಕೀಸ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಎಸ್. ಪಿ. ನಾಗರಾಜಗೌಡ ಸೇರಿದಂತೆ ಹಲವು ಪ್ರಮುಖ ನಾಯಕರು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

