ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ರೇಣುಕಸ್ವಾಮಿ ಕೊಲೆ ಪ್ರಕರಣದ ಒಟ್ಟು 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ್ದಾರೆ.
ಕಳೆದ ಡಿಸೆಂಬರ್ 9 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು ದರ್ಶನ್ ಅವರ ಪ್ರೇಯಸಿ ಪವಿತ್ರಾಗೌಡ ಬಗ್ಗೆ ಮೃತ ರೇಣುಕಸ್ವಾಮಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು. ಅವರಿಗೆ ಆಶ್ಲೀಲ ಸಂದೇಶಗಳನ್ನೂ ಕಳಿಸಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ದರ್ಶನ್, ಚಿತ್ರದುರ್ಗದ ರೇಣುಕಸ್ವಾಮಿ ಅವರ ಅಪಹರಣಕ್ಕೆ ಸೂಚಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು.
ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರಿಗೆ ಜಾಮೀನು ಸಿಕ್ಕಿರಲಿಲ್ಲ. ಈಗ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.