ಪಟ್ನಾ: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರ ಚುನಾವಣೆ ಎದುರಿಸಲು ಕಾರ್ಯತಂತ್ರರೂಪಿಸುವ ಸಂಬಂಧ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯೂಸಿ) ಸಭೆ ಇಂದಿನಿಂದ ಆರಂಭವಾಗಿದೆ. ಇಲ್ಲಿನ ಸದಾಖತ್ ಆಶ್ರಮದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದಾರೆ.
ಜತೆಗೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಸಮತಿಗಳ ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ.
ಸ್ವಾತಂತ್ರ್ಯಾನಂತರ ಬಿಹಾರದಲ್ಲಿ ನಡೆಯುತ್ತಿರುವ ಮೊದಲ ‘ಸಿಡಬ್ಲ್ಯೂಸಿ’ ಸಭೆ ಎನ್ನುವುದು ಮತ್ತೊಂದು ವಿಶೇಷವಾಗಿದೆ. ಮತ ಕಳ್ಳತನ ಮತ್ತು ಬಿಹಾರ ಮಾದರಿಯಲ್ಲಿ ದೇಶಾದ್ಯಂತ ನಡೆಸಲು ಉದ್ದೇಶಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತೂ ಚರ್ಚೆ ನಡೆಯಲಿದ್ದು ಬಿಜೆಪಿ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಬಗ್ಗೆಯೂ ವಿಸ್ತೃತ ಚರ್ಚೆ ನಡೆಯಲಿದೆ.
ಬಿಹಾರದಲ್ಲಿ ರಾಹುಲ್ ಗಾಂಧಿ ‘ಮತದಾರರ ಅಧಿಕಾರ ಯಾತ್ರೆ’ ಪೂರ್ಣಗೊಳಿಸಿದ್ದಾರೆ. ಮಹಾ ಘಟಬಂಧನ್ ಮೈತ್ರಿಕೂಟದ ನಡುವೆ ಸೀಟು ಹಂಚಿಕೆ ಮಾತುಕತೆ ನಡೆದಿದೆ. ಇದರ ಬೆನ್ನಲ್ಲೇ ಸಿಡಬ್ಲ್ಯೂಸಿ ಸಭೆ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ.