ಪಟ್ನಾ: ಬಿಹಾರ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಎನ್ ಡಿಎ ಮೈತ್ರಿಕೂಟವನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಸವಾಲು ಹಾಕಿದ್ದಾರೆ. ಇಂದು ಬೆಳಗ್ಗೆ ತೇಜಸ್ವಿ ಯಾದವ್ ಅವರನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿತ್ತು.
ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಖಚಿತತೆ ಇಲ್ಲ. ಇದುವರೆಗೂ ಎನ್‌ಡಿಎ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಲಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸಚಿವ ಅಮಿತ್ ಶಾ ಚುನಾವಣೆಯ ನಂತರ ಶಾಸಕಾಂಗ ಪಕ್ಷದ ಸದಸ್ಯರು ತಮ್ಮ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಅಂದರೆ ನಿತೀಶ್ ಕುಮಾರ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.
ಇಡೀ ದೇಶದಲ್ಲಿ ಬಿಹಾರವನ್ನು ನಂಬರ್ ಒನ್ ಮಾಡುವುದು ನಮ್ಮ ಗುರಿಯಾಗಿದೆ. ಇದನ್ನು ಸಾಧಿಸಲು ನಮಗೆ 14 ಕೋಟಿ ಬಿಹಾರಿಗಳ ಬೆಂಬಲ ಬೇಕಾಗಿದೆ. ಇಂಡಿಯಾ ಬಣ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಮತ್ತು ಹೇಳಿದ್ದನ್ನು ಮಾಡಿ ತೋರಿಸುತ್ತೇನೆ ಎಂದಿದ್ದಾರೆ.
ಬಿಹಾರದ ಜನ ಬದಲಾವಣೆಯನ್ನು ಬಯಸುತ್ತಿರುವುದು ಇಡೀ ರಾಜ್ಯದಲ್ಲಿ ಕಂಡು ಬರುತ್ತಿದೆ. ಅಭಿವೃದ್ಧಿಯತ್ತ ಮುಖ ಮಾಡಿದ್ದಾರೆ. ಹಿಂದುಳಿದ ಸಮುದಾಯದ ಮುಖೇಶ್ ಸಹಾನಿ ಅವರನ್ನು ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಇತರ ಸಮುದಾಯಗಳಿಗೂ ಅವಕಾಶ ನೀಡಲಾಗುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.