ಬೆಂಗಳೂರು: ಸಿಬಿಐ ವಿಶೇಷ ಕೋರ್ಟ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮುಖಂಡ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಹೈದರಾಬಾದ್ ನಲಿರುವ ಸಿಬಿಐ ವಿಶೇಷ ನ್ಯಾಯಾಲಯದ ಪ್ರಧಾನ ವಿಶೇಷ ನ್ಯಾಯಾಧೀಶರು ಈ ಮಹತ್ವದ ತೀರ್ಪು ನೀಡಿದ್ದರು. ತೀರ್ಪು ಪ್ರಕಟವಾದ ಮೇ 6 ರಿಂದಲೇ ಅನ್ವಯವಾಗುವಂತೆ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಂ.ವಿಶಾಲಾಕ್ಷಿ ಅವರು ಅಧಿಸೂಚನೆ
ಹೊರಡಿಸಿದ್ದಾರೆ. ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 191(1) (ಇ) ಅನ್ವಯ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ವಿಧಾನಸಭೆಯ ಒಂದು ಸ್ಥಾನ ತೆರವಾಗಿದೆ ಎಂದೂ ಅವರು ತಿಳಿಸಿದ್ದಾರೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಅಸ್ತಿತ್ವದಲ್ಲಿ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಏನಿದು ಪ್ರಕರಣ?
ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಬಿವಿ ಶ್ರೀನಿವಾಸ ರೆಡ್ಡಿ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದಂತೆ ಶಾಸಕ ಸ್ಥಾನ ಉಳಿಸಿಕೊಳ್ಳಲು ರೆಡ್ಡಿ ಅವರು ಶಿಕ್ಷೆಯನ್ನು ಕಡಿಮೆ ಮಾಡುವಂತೆ ನ್ಯಾಯಾಧೀಶರನ್ನು ಪರಿಪರಿಯಾಗಿ ಬೇಡಿಕೊಂಡಿದ್ದರು. ಆದರೆ ನ್ಯಾಯಾಲಯ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದ್ದ 2008ರಿಂದ 2013ರ ಅವಧಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು 13 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿತ್ತು.
ಈ ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳಿದ್ದು, ಆರೋಪಿ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಅವರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಮತ್ತೊಬ್ಬ ಆರೋಪಿ ಲಿಂಗರೆಡ್ಡಿ ಮೃತಪಟ್ಟಿದ್ದಾರೆ. ಏಳು ಆರೋಪಿಗಳ ಪೈಕಿ ಇಬ್ಬರಿಗೆ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದ್ದರೆ ಉಳಿದ 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು.