Sunday, September 8, 2024

ರಾಮೇಶ್ವರಂ ಕೆಫೆ ಪ್ರಕರಣ : ಕಪೋಲಕಲ್ಪಿತ ವರದಿ ಬಿತ್ತರಿಸದಂತೆ ಮಾಧ್ಯಮಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

Most read

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ ಜೆ ಹಳ್ಳಿಯಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್, ಮಾಧ್ಯಮದ ಮಿತ್ರರಲ್ಲಿ ವಿನಂತಿ. ತನಿಖೆಯ ವಿವರಗಳನ್ನು ಅಥವಾ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸದಿರಿ. ತನಿಖಾ ತಂಡಗಳು ಸ್ವತಂತ್ರವಾಗಿ ಮತ್ತು ವೃತ್ತಿಪರವಾಗಿ ಕೆಲಸ ಮಾಡಲು ಅನುವು ಮಾಡಿಕೊಡಿ ಎಂದು ತಿಳಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

More articles

Latest article