ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಮಾದರಿಯಲ್ಲಿ ಬೆಂಗಳೂರಿನಲ್ಲಿ ಆರು ಮಂದಿ ಗಣ್ಯರ ನಿವಾಸಗಳನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಗಣರಾಜ್ಯೋತ್ಸವ ಆಚರಿಸುವ ಜನವರಿ 26 ರಂದು ಈ ಸ್ಫೋಟ ನಡೆಸುವುದಾಗಿ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ವ್ಯಕ್ತಿ ಜ. 9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ. ಈತ ನೀಡಿದ ಆರು ಮಂದಿಯ ಗಣ್ಯರ ವಿಳಾಸಗಳನ್ನು ಆಯಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಈ ರೀತಿಯ ಕರೆ ಬಂದಿರುವುದು ಬೆಂಗಳೂರು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಮುನ್ನೆಚರಿಕೆ ಕ್ರಮವಾಗಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ.