ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ‘ರಾಷ್ಟ್ರದ ಪಗ್ರತಿನಿಷ್ಠ ಬಜೆಟ್’ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಹೇಳಿದ್ದಾರೆ.
ಇಂದು(ಪೆ 1) ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೊನೆಯ ಬಜೆಟ್ ಅನ್ನು ಮಂಡಿಸಿದರು. ಈ ಬಗ್ಗೆ ತಮ್ಮ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಅವರು, ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ, ರಾಷ್ಟ್ರದ ‘ಪ್ರಗತಿನಿಷ್ಠ ಬಜೆಟ್’ ಇದಾಗಿದೆ ಎಂದಿದ್ದಾರೆ.
ಮುಂದುವರಿದು, ‘ಚುನಾವಣಾಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಜನತೆ, ರೈತರು, ಮಹಿಳೆಯರು ಹಾಗೂ ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಆಯವ್ಯಯವನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
‘ಮುಂದಿನ ದಿನಗಳಲ್ಲಿ ಸದೃಢ, ಸಶಕ್ತ, ವಿಕಸಿತ, ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್.ಡಿ.ಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸಿದ್ದು, ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಹೇಳಿದ್ದಾರೆ.