ಮನೆ ನಿರ್ಮಾಣದ ಸಹಾಯಧನದಲ್ಲಿ ಭಾರಿ ಹೆಚ್ಚಳ
ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಹೊಸದಾಗಿ ಒಂದು ಲಕ್ಷ ಮನೆಗಳನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗಳಡಿ ಆಯ್ಕೆಯಾಗುವ ಫಲಾನುಭವಿಗಳಿಗೆ ನೀಡುವ ಆರ್ಥಿಕ ನೆರವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

- ಸಾಮಾನ್ಯ ವರ್ಗ: ಸಹಾಯಧನವನ್ನು 1.20 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಏರಿಸಲಾಗಿದೆ.
- SC/ST ವರ್ಗ: ಸಹಾಯಧನವನ್ನು 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಇನ್ನು ಮುಂದೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಗ್ರಾಮ ಸಭೆಗಳಲ್ಲಿ ‘ಆನ್‌ಲೈನ್ ಲಾಟರಿ’ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
ಆನೇಕಲ್‌ನಲ್ಲಿ ‘ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮ’
ಕ್ರೀಡಾ ಲೋಕಕ್ಕೆ ದೊಡ್ಡ ಕೊಡುಗೆಯಾಗಿ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ʻಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮʼ ನಿರ್ಮಾಣವಾಗಲಿದೆ. ಇಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಬೃಹತ್ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
ನಿವೇಶನ ಮತ್ತು ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು
ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ‘ನಮ್ಮ ಮನೆ’ ಯೋಜನೆಯಡಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ. ಜೊತೆಗೆ, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ 1.29 ಲಕ್ಷ ಮನೆಗಳಲ್ಲಿ ಈಗಾಗಲೇ 79,134 ಮನೆಗಳನ್ನು ಲೋಕಾರ್ಪಣೆ ಮಾಡುವ ಮೂಲಕ ಬಡವರಿಗೆ ಶಾಶ್ವತ ಸೂರು ನೀಡಲಾಗಿದೆ.
ಸರ್ಕಾರವು ಅಧಿಕಾರಕ್ಕೆ ಬಂದ ನಂತರ 4.19 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ ಮೂರು ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಮಹತ್ವಾಕಾಂಕ್ಷಿ ಗುರಿಯನ್ನು ಹೊಂದಿದೆ.

