ಮೇಕೆದಾಟು ಯೋಜನೆ: ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಜಯ
ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಗಳು ವಜಾಗೊಂಡಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ, ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆ
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.
- ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.
ಕೃಷ್ಣಾ ಮೇಲ್ದಂಡೆ ಯೋಜನೆ (UKP Stage-III): ಭೂಸ್ವಾಧೀನ ದರ ಏರಿಕೆ
ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ
UKP Stage-III ಯೋಜನೆಯಡಿ ಆಲಮಟ್ಟಿ ಅಣೆಕಟ್ಟನ್ನು 519.6 ಮೀ. ಯಿಂದ 524.256 ಮೀ. ಗೆ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆಯಾಗುವ ಜಮೀನುಗಳು ಹಾಗೂ ನೀರಾವರಿ ಕಾಲುವೆ ಜಾಲಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರು ಮತ್ತು ಸಂತ್ರಸ್ತರ ದೀರ್ಘಕಾಲದ ಬೇಡಿಕೆಗೆ ನಮ್ಮ ಸರ್ಕಾರ ಸ್ಪಂದಿಸಿ ಪರಿಷ್ಕೃತ ಒಪ್ಪಂದದ ದರಗಳನ್ನು ಅನುಮೋದಿಸಿದೆ. ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ನಿಗದಿಪಡಿಸಲಾಗಿದೆ. ಒಪ್ಪಂದದ ಐತೀರ್ಪುಗಳ ಮುಖಾಂತರ ಜಮೀನನ್ನು ಸ್ವಾಧೀನಪಡಿಸುವ ಪ್ರಕ್ರಿಯೆಯನ್ನು ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವುದು.
ಹೊಸ ನೀರಾವರಿ ಮತ್ತು ಆಧುನೀಕರಣ ಯೋಜನೆಗಳು
ಉಡುತೊರೆಹಳ್ಳ ಯೋಜನೆ: 490 ಕೋಟಿ ರೂ. ವೆಚ್ಚದಲ್ಲಿ ಚಾಮರಾಜನಗರದ 12 ಸಾವಿರ ಎಕರೆಗೆ ನೀರಾವರಿ.
ಆಧುನೀಕರಣ: ನೀರಿನ ದಕ್ಷತೆ ಹೆಚ್ಚಿಸಲು ‘Pressurised Piped Network’ ಪದ್ಧತಿಯ ಅಳವಡಿಕೆ.
ಒಟ್ಟು ಗುರಿ: ವಿವಿಧ ನಿಗಮಗಳಡಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.

